ಹಾಸನ : ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಒತ್ತಾಯಿಸಿ SFI ಪ್ರತಿಭಟನೆ

ಹಾಸನ: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಬೇಕೆಂದು ಆಗ್ರಹಿಸಿ, SFI ಜಿಲ್ಲಾ ಸಮಿತಿಯ ವತಿಯಿಂದ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ SFI ಜಿಲ್ಲಾ ಕಾರ್ಯದರ್ಶಿ ರಮೇಶ್ ಹಾಸನ್ ಅವರು, “ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರ ನೇಮಕಾತಿ ಇನ್ನೂ ನಡೆದಿಲ್ಲ. ಸರ್ಕಾರಿ ಪದವಿ ಕಾಲೇಜುಗಳಲ್ಲಿ 70% ಕ್ಕಿಂತ ಹೆಚ್ಚು ಬೋಧನಾ ಕಾರ್ಯವನ್ನು ಅತಿಥಿ ಉಪನ್ಯಾಸಕರೇ ನಿರ್ವಹಿಸುತ್ತಿದ್ದಾರೆ. ಆದರೆ ಈ ಬಾರಿ UGC ಮತ್ತು NON-UGC ಎಂಬ ಗೊಂದಲದಿಂದಾಗಿ ಆಯ್ಕೆ ಪ್ರಕ್ರಿಯೆ ಸ್ಥಗಿತಗೊಂಡಿದೆ. ಇದರಿಂದ ಸುಮಾರು 10,000 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ಹಿನ್ನಡೆಯಾಗಿದೆ” ಎಂದು ಹೇಳಿದರು.

ಅವರು ಮುಂದುವರಿದು, “ಹೆಚ್ಚಾಗಿ ಬಡವ, ರೈತ, ಕಾರ್ಮಿಕ, ದಲಿತ, ಹಿಂದುಳಿದ ಕುಟುಂಬಗಳ ಮಕ್ಕಳು ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ಹಿತಾಸಕ್ತಿಗಾಗಿ ಮುಖ್ಯಮಂತ್ರಿ ತಕ್ಷಣ ಮಧ್ಯಪ್ರವೇಶಿಸಿ ಕಾಲೇಜು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಬೇಕು. ಯಾವುದೇ ತಾರತಮ್ಯವಿಲ್ಲದೇ ಸೇವಾ ಹಿರಿತನದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ನೇಮಕ ಮಾಡಬೇಕು. ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಆಯೋಗ ರಚಿಸಬೇಕಾಗಿದೆ. ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ DYFI ನ ಪೃಥ್ವಿ, ಎಂ.ಜಿ. ಕಾರ್ಯದರ್ಶಿ ವಿವೇಕ್, ಛಾಯ, ವಿಕ್ಕಿ, ರಂಗ, ಅಫ್ತಾಬ್ ಹಾಗೂ ಹಲವರು ಭಾಗವಹಿಸಿದ್ದರು.